ಬ್ರಹ್ಮಾವರ ರೈತ ಹೋರಾಟಕ್ಕೆ ಗೆಲುವು - ಆಡಳಿತ ಮಂಡಳಿ ಮೇಲೆ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ಗೆ  ಸರ್ಕಾರ ಅನುಮತಿ

ಬ್ರಹ್ಮಾವರ ರೈತ ಹೋರಾಟಕ್ಕೆ ಗೆಲುವು - ಆಡಳಿತ ಮಂಡಳಿ ಮೇಲೆ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ಗೆ ಸರ್ಕಾರ ಅನುಮತಿ

 


ಬ್ರಹ್ಮಾವರ: 50 ದಿನಗಳ ಕಾಲ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಹೊರಭಾಗದಲ್ಲಿ ಉಡುಪಿ ಜಿಲ್ಲಾ ರೈತಸಂಘದ ನಡೆಸಿದ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಸಂಬಂಧಿಸಿದಂತೆ ಕೊನೆಗೂ ಗೆಲುವು ಸಿಕ್ಕಿದೆ. 

ಬ್ರಹ್ಮಾವರದ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯ ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ಒಟ್ಟು 13.92 ಕೋಟಿ ರೂ. ನಷ್ಟ ಉಂಟಾಗಿರುವುದು ತನಿಖೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಮೇಲೆ ಕ್ರಿಮಿನಲ್‌ ಪ್ರಾಸಿಕ್ಯೂಷನ್‌ಗೆ  ಕರ್ನಾಟಕ ಸರ್ಕಾರ ಅನುಮತಿ ನೀಡಿದೆ.

ಕಾರ್ಖಾನೆಗೆ ಒಟ್ಟು 13.92 ಕೋಟಿ ರೂ. ಆರ್ಥಿಕ ನಷ್ಟ ಉಂಟಾಗಲು ಆಡಳಿತ ಮಂಡಳಿ, ಟೆಂಡರ್‌ ಕಮ್‌ ಹರಾಜಿನ ತಾಂತ್ರಿಕ ಸಮಿತಿ ಸದಸ್ಯರು ಹಾಗೂ ಆಗಿನ ವ್ಯವಸ್ಥಾಪಕ ನಿರ್ದೇಶಕರ ನಿರ್ಲಕ್ಷ್ಯವೇ ಕಾರಣ ಎಂಬುದು ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ. ರಾಧಾಕೃಷ್ಣ ಹೊಳ್ಳ ಅವರು ನಡೆಸಿ ಸಲ್ಲಿಸಿದ ತನಿಖಾ ವರದಿಯಲ್ಲಿ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಈಗಾಗಲೇ ಕಾರ್ಖಾನೆಯ ನಿರ್ದೇಶಕ ಮಂಡಳಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಈಗ ಸಂಬಂಧಿತ ಅಧಿಕಾರಿಗಳ ಮೇಲೂ ನ್ಯಾಯಾಲಯದ ವಿಚಾರಣೆಗೆ ಅನುಮತಿ ಸಿಕ್ಕಂತಾಗಿದೆ.

ಹಿನ್ನೆಲೆ ಏನು?

1985ರಲ್ಲಿ ಆರಂಭವಾಗಿದ್ದ ಸಕ್ಕರೆ ಕಾರ್ಖಾನೆ 2002-03ನೇ ಸಾಲಿನವರೆಗೆ ಕಬ್ಬು ನುರಿಸಿದ್ದು, ಕಬ್ಬಿನ ಕೊರತೆ ಮತ್ತು ದುಡಿಯುವ ಬಂಡವಾಳದ ಕೊರತೆ ಕಾರಣ 2003-04ನೇ ಸಾಲಿನಿಂದ ಕಬ್ಬು ನುರಿಸುವ ಕಾರ್ಯ ಸ್ಥಗಿತಗೊಳಿಸಲಾಗಿತ್ತು.  17 ವರ್ಷಗಳಿಂದ ಕಾರ್ಯನಿರ್ವಹಿಸದ ಕಾರಣ ತುಕ್ಕು ಹಿಡಿದು ಹಾಳಾಗುತ್ತಿರುವ ಯಂತ್ರೋಪಕರಣ ಮತ್ತು ಕಾರ್ಖಾನೆ ಕಟ್ಟಡವನ್ನು ಟೆಂಡರ್‌ ಕಮ್‌ ಹರಾಜು ಮೂಲಕ ಮಾರಾಟ ಮಾಡಲು ಆಡಳಿತ ಮಂಡಳಿ ಕೋರಿದ್ದರಿಂದ ಅನುಮತಿ ನೀಡಲಾಗಿತ್ತು.

ಆದರೆ, ಟೆಂಡರ್‌ ಪ್ರಕ್ರಿಯೆಯನ್ನು ನಿಯಮಗಳ ಪ್ರಕಾರ ನಡೆಸದಿರುವುದು ಈಗ ದಾಖಲಾತಿಗಳಿಂದ ಸ್ಪಷ್ಟವಾಗಿದೆ. ಯಂತ್ರೋಪಕರಣ ಹಾಗೂ ನಿರುಪಯುಕ್ತ ಸಾಮಗ್ರಿಗಳನ್ನು ಟೆಂಡರ್‌ ಕಮ್‌ ಹರಾಜು ಮೂಲಕ ಮಾರಾಟ ಮಾಡುವ ಪ್ರಕ್ರಿಯೆಯಲ್ಲಿ ಪ್ರತಿ ಕೆಜಿಗೆ ಅತಿ ಹೆಚ್ಚು ದರ ನಮೂದಿಸಿದ ಬಿಡ್‌ದಾರರಿಗೆ ಮಾರಾಟ ಮಾಡಬೇಕು ಎಂದು ಆಡಳಿತ ಮಂಡಳಿ ನಿರ್ಧಾರ ಕೈಗೊಂಡು, 50 ಲಕ್ಷ ರೂ. ಭದ್ರತಾ ಠೇವಣಿ ಹಾಗೂ 5 ಕೋಟಿ ರೂ. ಬ್ಯಾಂಕ್‌ ಗ್ಯಾರಂಟಿ ಪಾವತಿಸಬೇಕು ಎಂದು ಬಿಡ್‌ದಾರರಿಗೆ ತಿಳಿಸಿತ್ತು.

 ಹಳೆಯ ಯಂತ್ರೋಪಕರಣಗಳನ್ನು ಕೆಜಿ ಲೆಕ್ಕದಲ್ಲಿ ತೆಗೆದುಕೊಂಡು ಹೋಗುವುದು ಕಷ್ಟ, ಹೀಗಾಗಿ ಲಾಟ್‌ ಆಧಾರದ ಮೇಲೆ ನೀಡಬೇಕು ಎಂದು ಟೆಂಡರ್‌ ಗೆದ್ದ ನ್ಯೂ ರಾಯಲ್‌ ಟ್ರೇಡರ್ಸ್‌ ನವರು ಮನವಿ ಮಾಡಿಕೊಂಡಿದ್ದು, ಈ ಮನವಿಗೆ ಆಡಳಿತ ಮಂಡಳಿ ಸಮ್ಮತಿಸಿರುವುದು ಟೆಂಡರ್‌ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಚಾರಣಾಧಿಕಾರಿಗಳು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ರಾಯಲ್‌ ಟ್ರೇಡರ್ಸ್‌ನವರು 46 ಲೋಡುಗಳಲ್ಲಿ 1139.37 ಮೆಟ್ರಿಕ್‌ ಟನ್‌ ಸ್ಕ್ರಾಪ್‌ ತೆಗೆದುಕೊಂಡು ಹೋಗಿದ್ದೇವೆ ಎಂದು ತಿಳಿಸಿದ್ದಾರೆ. ಆದರೆ 83 ಲೋಡುಗಳಲ್ಲಿ 2245.65 ಮೆಟ್ರಿಕ್‌ ಟನ್‌  ಸ್ಕ್ರಾಪ್‌ ಸಾಗಾಟ ಮಾಡಿರುವುದು ದಾಖಲೆಗಳಲ್ಲಿ ಸ್ಪಷ್ಟವಾಗಿದೆ. ಖರೀದಿದಾರರು ಕಾರ್ಖಾನೆಗೆ ನೀಡಿರುವ ಹಣವನ್ನು ಕಳೆದು ಇನ್ನೂ 12.63 ಕೋಟಿ ರೂ. ಬರಬೇಕಾಗಿದೆ. ಇದಲ್ಲದೆ ಹಳೆಯ ಕಟ್ಟಡ ಸಾಮಗ್ರಿಗಳನ್ನು ಕೂಡ ಮಾರಾಟ ಮಾಡಿದ್ದು, ಇದರಿಂದ 1.28 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಕಾರ್ಖಾನೆಯಿಂದ ಸಾಗಾಟ ಮಾಡಲಾಗಿದೆ ಎಂದು ತನಿಖಾ ವರದಿಯಲ್ಲಿ ವಿವರಿಸಲಾಗಿದೆ. ಈಗ ಈ ಪ್ರಕರಣದ ನ್ಯಾಯಾಲಯ ವಿಚಾರಣೆಗೆ ಅನುಮತಿ ದೊರೆತಿದ್ದು, ಪ್ರಕರಣ ನಿರ್ಣಾಯಕ ಹಂತಕ್ಕೆ ತಲುಪಿದೆ.ಈ ಬೆಳವಣಿಗೆಯೊಂದಿಗೆ, ರೈತರ ಹೋರಾಟಕ್ಕೆ ಒಂದು ಹಂತದ ಜಯ ಸಿಕ್ಕಂತಾಗಿದೆ.

Ads on article

Advertise in articles 1

advertising articles 2

Advertise under the article