ಉಡುಪಿ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಪ್ರಾರಂಭ: ಡಿಸಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಪ್ರಾರಂಭ: ಡಿಸಿ ಸ್ವರೂಪ ಟಿ.ಕೆ

 


ಉಡುಪಿ: ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯವು ಇಂದಿನಿಂದ ಮುಂದಿನ 45 ದಿನಗಳ ಕಾಲ ನಡೆಯಲಿದ್ದು, ಸಮೀಕ್ಷೆಯ ಸಂದರ್ಭದಲ್ಲಿ ಯಾವುದೇ ಲಿಂಗತ್ವ ಅಲ್ಪಸಂಖ್ಯಾತರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಅಧಿಕಾರಿಗಳು ಹಾಗೂ ಸಮೀಕ್ಷಾದಾರರಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬೇಸ್ ಲೈನ್‌ ಸರ್ವೇ ನಡೆಸುವ ಕುರಿತು ನಡೆದ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಲಿಂಗತ್ವ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಮುಂದಿನ ದಿನಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರಕಾರದಿಂದ ಲಭ್ಯವಿರುವ ಯೋಜನೆ ಹಾಗೂ ಸವಲತ್ತುಗಳನ್ನು ಸೂಕ್ತ ರೀತಿಯಲ್ಲಿ ತಲುಪಿಸಲು ಹಾಗೂ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಲು ಈ ಸಮೀಕ್ಷೆ ಅನುಕೂಲವಾಗಲಿದೆ ಎಂದರು.

ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯು ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಸೆ.15ರಿಂದ ಒಟ್ಟು 45 ದಿನಗಳ ಕಾಲ ನಡೆಯಲಿದೆ. ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರನ್ನೇ ಸಮೀಕ್ಷಾ ಕಾರ್ಯಕ್ಕೆ ನೇಮಿಸಲಾಗಿದ್ದು, ಈಗಾಗಲೇ ಸಮೀಕ್ಷೆಗೆ ಗುರುತಿಸಲಾಗಿರುವ ಮೂವರು ಸಮೀಕ್ಷೆದಾರರಿಗೆ ಬೆಂಗಳೂರಿನಲ್ಲಿ ಆಫ್‌ಲೈನ್ ಹಾಗೂ ಆನ್‌ಲೈನ್ ಮೂಲಕ ತರಬೇತಿ ನೀಡಲಾಗಿದೆ ಎಂದರು.

ಸಮೀಕ್ಷಾ ಕಾರ್ಯಕ್ಕಾಗಿ ಉಡುಪಿಯ ಜಿಲ್ಲಾ ಆಸ್ಪತ್ರೆ, ಕಾರ್ಕಳ ಹಾಗೂ ಕುಂದಾಪುರದ ತಾಲೂಕು ಆಸ್ಪತ್ರೆಗಳಲ್ಲಿ ಒಂದು ಕೊಠಡಿಯನ್ನು ಕಾಯ್ದಿರಿಸಲಾಗಿದೆ ಎಂದ ಅವರು, ಸಮೀಕ್ಷೆ ಕಾರ್ಯವನ್ನು ಮೊಬೈಲ್ ಆ್ಯಪ್ ಮೂಲಕ ಟ್ಯಾಬ್‌ಗಳಲ್ಲಿ ಕೈಗೊಳ್ಳಲಿದ್ದು, ಇದರಲ್ಲಿ ಸುಮಾರು 150 ಪ್ರಶ್ನಾವಳಿಗಳಿದ್ದು, ಲಿಂಗತ್ವ ಅಲ್ಪಸಂಖ್ಯಾತರು ಯಾವುದೇ ಗೊಂದಲಗಳಿಗೆ ಒಳಗಾಗದೇ ಸ್ಪಷ್ಟ ಹಾಗೂ ನಿಖರ ಮಾಹಿತಿ ನೀಡಬೇಕು ಎಂದರು.

Ads on article

Advertise in articles 1

advertising articles 2

Advertise under the article