
ಉಡುಪಿ: ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ಇಲ್ಲ- ಉಡುಪಿ ಡಿಸಿ ಸ್ವರೂಪ ಟಿ.ಕೆ
ಉಡುಪಿ: ಜಿಲ್ಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು, ನಿಯಮಾನುಸಾರ ಮಾರ್ಗ ಸೂಚಿಗಳನ್ನು ಪಾಲಿಸಬೇಕು. ಅದರೊಂದಿಗೆ ಯಾವುದೇ ಅನಾಹುತಗಳು ಸಂಭವಿಸದಂತೆ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.
ದೀಪಾವಳಿ ಹಬ್ಬದ ಸಮಯದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ದೀಪಾವಳಿ ಹಬ್ಬ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ನಿಗದಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ಹೊಸದಾಗಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯುವವರಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಗ್ನಿಶಾಮಕ, ಪೊಲೀಸ್ ಇಲಾಖೆ, 3 ತಹಶೀಲ್ದಾರರ ಕಛೇರಿ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಪಡೆದ ನಿರಾಕ್ಷೇಪಣಾ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದರು.
ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಮೊದಲು ತಹಶೀಲ್ದಾರರ ನೇತೃತ್ವದ ಸಮಿತಿಯು ಖುದ್ದು ಸ್ಥಳ ಪರಿಶೀಲನೆ ನಡೆಸಬೇಕು. ಅಂಗಡಿ ಮುಂಗಟ್ಟುಗಳ ಸಮೀಪ, ಜನನಿಬಿಡ ಪ್ರದೇಶ, ಸಂಚಾರ ವ್ಯವಸ್ಥೆಗೆ ಅಡಚಣೆಯಾಗುವ ಕಡೆಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಬಾರದು ಎಂದು ಅವರು ಸೂಚಿಸಿದರು.