ಬೆಂಗಳೂರು: ಬಿಎಸ್ ಯಡಿಯೂರಪ್ಪ ವಿರುದ್ಧದ ಪೊಕ್ಸೋ ಪ್ರಕರಣ- ಆದೇಶ ಕಾಯ್ದಿರಿಸಿದ ಹೈಕೋರ್ಟ್

 

ಹೈಕೋರ್ಟ್- ಸಂಗ್ರಹ ಚಿತ್ರ

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತಮ್ಮ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆ(ಪೊಕ್ಸೊ) ಕಾಗ್ನಿಜೆನ್ಸ್​ ತೆಗೆದುಕೊಂಡಿರುವ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ, ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಇಂದು ಆದೇಶ ಕಾಯ್ದಿರಿಸಿತು.

ಪ್ರಕರಣ ಸಂಬಂಧ ಬಿ.ಎಸ್.ಯಡಿಯೂರಪ್ಪ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿತು.

ವಿಚಾರಣೆ ವೇಳೆ ಅರ್ಜಿದಾರ ಯಡಿಯೂರಪ್ಪ ಪರ ವಕೀಲರು, ಅಪ್ರಾಪ್ತ ಸಂತ್ರಸ್ತೆಯ ಹೇಳಿಕೆಯನ್ನು ಮಾತ್ರ ಪರಿಗಣಿಸಿ, ಕಾಗ್ನಿಜೆನ್ಸ್​ ಪಡೆದುಕೊಳ್ಳಲಾಗಿದೆ ಎಂಬುದಾಗಿ ವಿಚಾರಣಾಧೀನ ನ್ಯಾಯಾಲಯ ಹೇಳಬೇಕಿತ್ತು. ಅದನ್ನೂ ಮಾಡಿಲ್ಲ. ಹೊಸದಾಗಿ ಪ್ರಕರಣವನ್ನು ಪರಿಗಣಿಸುವಂತೆ ಸಮನ್ವಯ ಪೀಠವು ವಿಚಾರಣಾಧೀನ ನ್ಯಾಯಾಲಯಕ್ಕೆ ಆದೇಶಿಸಿತ್ತು. ಇದನ್ನೂ ಮಾಡಲಾಗಿಲ್ಲ. ಕಾಗ್ನಿಜೆನ್ಸ್​ ಪರಿಗಣಿಸುವಾಗ ವಿಚಾರಣಾಧೀನ ನ್ಯಾಯಾಲಯದ ನ್ಯಾಯಾಧೀಶರು ವಿವೇಚನೆ ಬಳಸಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಪ್ರಾಸಿಕ್ಯೂಷನ್ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್.ಜಗದೀಶ್, ಸಂತ್ರಸ್ತೆಯ ತಾಯಿ ಮತ್ತು ಯಡಿಯೂರಪ್ಪ ನಡುವಿನ ಆಡಿಯೊ ರೆಕಾರ್ಡಿಂಗ್ ನಾಶಪಡಿಸಲಾಗಿದೆ. ಅದು ಇಲ್ಲ ಎಂದಾದರೆ ಯಡಿಯೂರಪ್ಪ ಅವರು ಎರಡು ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ಏಕೆ ನೀಡಿದ್ದರು? ಸಂತ್ರಸ್ತೆಯ ತಾಯಿಯ ಮೊಬೈಲ್ ಕಸಿದು ಸಹ ಆರೋಪಿ ಅರುಣ್ ಎಂಬವರು ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದ್ದ ಆಡಿಯೊ ರೆಕಾರ್ಡಿಂಗ್ ಡಿಲೀಟ್ ಮಾಡಿಸಿದ್ದಾರೆ. ಆದರೆ, ಸಂತ್ರಸ್ತೆ ಮೊಬೈಲ್​ನಲ್ಲಿ ಅಸಲಿ ಆಡಿಯೊ ಉಳಿದಿದೆ ಎಂದು ಪೀಠಕ್ಕೆ ವಿವರಿಸಿದರು.

ಅಲ್ಲದೆ, ಆಡಿಯೊದಲ್ಲಿರುವ ಧ್ವನಿಯು ಯಡಿಯೂರಪ್ಪ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಖಾತರಿಪಡಿಸಿದೆ. ಸಂತ್ರಸ್ತೆಯನ್ನು ಖಾಸಗಿ ಕೊಠಡಿಗೆ ಕರೆದೊಯ್ದು ಬಿಎಸ್​​ವೈ ಆಕೆಯ ಎದೆಯನ್ನು ಕೈಯಿಂದ ಮುಟ್ಟಿ ಅದುಮಿದ್ದಾರೆ. ಸಂಜ್ಞೇ ಪರಿಗಣಿಸುವಾಗ ವಿಚಾರಣಾಧೀನ ನ್ಯಾಯಾಲಯವು ಇದನ್ನು ಪರಿಗಣಿಸಿದೆ. ಆ ನಂತರ ಸಂತ್ರಸ್ತೆಯು ಅಳುತ್ತಾ ಹೊರಬಂದಿದ್ದಾರೆ. ಇದನ್ನೂ ನ್ಯಾಯಾಲಯ ಪರಿಗಣಿಸಿದೆ ಎಂದು ಪೀಠಕ್ಕೆ ವಿವರಿಸಿದರು. ಅರ್ಜಿಯ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಪೀಠ, ಆದೇಶ ಕಾಯ್ದಿರಿಸಿದೆ.