ಮುಂಬೈ:ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ (89) ನಿಧನ


ಧರ್ಮೇಂದ್ರ

ಮುಂಬೈ: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರು ತಮ್ಮ 89ನೇ ವಯಸ್ಸಿನಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಕೆಲ ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ವೆಂಟಿಲೇಟರ್​ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಧರ್ಮೇಂದ್ರ ಕೊನೆಯ ಬಾರಿಗೆ 2024ರಲ್ಲಿ 'ತೇರಿ ಬಾತೋ ಮೇ ಐಸಾ ಉಲ್ಜಾ ಜಿಯಾ' ಚಿತ್ರದಲ್ಲಿ ಕಾಣಿಸಿಕೊಂಡರು. ಈ ಚಿತ್ರದಲ್ಲಿ ನಟರಾದ ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಿರಿಯ ನಟ ಮುಂದೆ ಖ್ಯಾತ ನಿರ್ದೇಶಕ ಶ್ರೀರಾಮ್ ರಾಘವನ್ ನಿರ್ದೇಶನದ 'ಇಕ್ಕಿಸ್' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದರು. ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳಿವೆ ಅನ್ನೋ ಸಂದರ್ಭದಲ್ಲಿ ನಟ ಇಹಲೋಕ ತ್ಯಜಿಸಿದ್ದಾರೆ.

ಭಾರತೀಯ ಸಿನಿಮಾ ಇತಿಹಾಸದಲ್ಲೇ ಅತ್ಯಂತ ಶ್ರೇಷ್ಠ, ಅತ್ಯಂತ ಸುಂದರ ಮತ್ತು ಕಮರ್ಷಿಯಲ್​ ಆಗಿಯೂ ಅತ್ಯಂತ ಯಶಸ್ವಿ ಸಿನಿಮಾ ನಟರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟ ಧರ್ಮೇಂದ್ರ, ಆರು ದಶಕಗಳಿಗೂ ಹೆಚ್ಚು ಕಾಲದ ಸಿನಿಮೀಯ ವೃತ್ತಿಜೀವನವನ್ನು ಹೊಂದಿದ್ದಾರೆ. 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.ಅವರ ನಿಧನಕ್ಕೆ ಬಾಲಿವುಡ್ ತಾರೆಯರು ,ಗಣ್ಯರು ಕಂಬನಿ ಮಿಡಿದಿದ್ದಾರೆ.