ಹೊಸದಿಲ್ಲಿ: ಬಿಗಿ ಭದ್ರತಾ ವಲಯವಾಗಿರುವ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರೊಂದರಲ್ಲಿ ಸ್ಫೋಟ ಸಂಭವಿಸಿದ್ದು,9 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬೆಂಕಿಯ ಕೆನ್ನಾಲಿಗೆಗೆ ಕಾರಿನ ಸುತ್ತಮುತ್ತಲೂ ಇದ್ದ ವಾಹನಗಳು ಸುಟ್ಟು ಕರಕಲಾಗಿವೆ.
ಸೋಮವಾರ(ನ.10) ಸಂಜೆ ಕೆಂಪು ಕೋಟೆ ಮೆಟ್ರೊ ನಿಲ್ದಾಣ ಗೇಟ್ ಸಂಖ್ಯೆ 1ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿರುವ ಬಗ್ಗೆ ಕರೆ ಬಂದಿತ್ತು. ಸ್ಫೋಟದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಪಕ್ಕದಲ್ಲಿದ್ದ 3-4 ವಾಹನಗಳಿಗೂ ಬೆಂಕಿ ವ್ಯಾಪಿಸಿದೆ ಎಂದು ಅಗ್ನಿಶಾಮಕ ದಳವು ಮಾಹಿತಿ ನೀಡಿದೆ.ಕಾರು ಸ್ಫೋಟಗೊಂಡ ಮಾಹಿತಿ ತಿಳಿಯುತ್ತಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ತ್ವರಿತವಾಗಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸದ್ಯ ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಘಟನೆಯಲ್ಲಿ ಈವರೆಗೆ 9 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಡೀ ಪ್ರದೇಶವನ್ನು ಸುತ್ತುವರಿದು ಬಂದ್ ಮಾಡಲಾಗಿದೆ. ಸ್ಫೋಟಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚಲು ವಿಧಿವಿಜ್ಞಾನ ತಜ್ಞರು ಸ್ಥಳವನ್ನು ಪರಿಶೀಲಿಸುತ್ತಿದ್ದಾರೆ. ಇದರ ಹಿಂದೆ ವಿಧ್ವಂಸಕ ಕೃತ್ಯದ ಸಾಧ್ಯತೆ ಇದೆಯೇ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
