ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಬನ್ನಂಜೆಯ ಡಾ! ವಿ.ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಕಲ್ಸoಕ ಜಂಕ್ಷನ್ ವರೆಗೆ ರೋಡ್ ಶೋ ಮೂಲಕ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, 'ಲಕ್ಷ ಕಂಠ ಗೀತೋತ್ಸವ'ದ ಸಾಮೂಹಿಕ ಭಗವದ್ಗೀತಾ ಪಠಣದಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಜನತೆಯ ಸಹಿತ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ಕಾರಿಡಾರ್ ಯೋಜನೆ ಸಹಿತ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಸ್ತಾವನೆಯನ್ನು ಸಲ್ಲಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಯ ಸಂಸದರು, ಶಾಸಕರು ಮತ್ತು ಪಕ್ಷದ ಪ್ರಮುಖರ ಸಮಾಲೋಚನಾ ಸಭೆಯಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿ ಪ್ರವಾಸದ ಹಿನ್ನೆಲೆಯಲ್ಲಿ ನ.19ರಂದು ಉಡುಪಿಗೆ ಬೇಟಿ ನೀಡಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ನಡೆಯಲಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ನ.16ರಿಂದ 23ರ ವರೆಗೆ ನಡೆಯುವ ತಾಲೂಕು ಮಟ್ಟದ 'ಯುವ ಸಮ್ಮೇಳನ'ದಲ್ಲಿ ಯುವ ಸಮುದಾಯ ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿ ಸಂಘಟಿತ ಪ್ರಯತ್ನದ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದರು.
