ಉಡುಪಿ: ಖಾಸಗಿ ಬಸ್ ಗಳು ನಿಯಮ ಪಾಲಿಸದಿದ್ದರೆ ಕಟ್ಟುನಿಟ್ಟನ ಕ್ರಮ - ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಚ್ಚರಿಕೆ



ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ಗಳಿಗೂ ಬಾಗಿಲುಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಬಸ್‌ಗಳಿಗೆ ಬಾಗಿಲು ಅಳವಡಿಸಲು ನಿಗದಿತ ಸಮಯಾವಕಾಶ ಕೊಟ್ಟು, ಅಳವಡಿಸದೇ ಇರುವ ವಾಹನಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆರ್‌ಟಿಓ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್‌ಗಳು ಬಸ್‌ ನಿಲ್ದಾಣವನ್ನು ಹೊರತುಪಡಿಸಿ, ಎಲ್ಲೆಂದರಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆರ್‌ಟಿಓ ಅಧಿಕಾರಿಗಳಿಗೆ ಈ ಮೊದಲೇ ಸೂಚಿಸಲಾಗಿತ್ತು. ಆದರೂ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿಲ್ಲ. ಪ್ರತೀ ತಿಂಗಳು ನಿಯಮ ಉಲ್ಲಂಘಿಸಿದ ಬಸ್‌ಗಳ ಮೇಲೆ ಪ್ರಕರಣಗಳನ್ನು ದಾಖಲಿಸಬೇಕು ಎಂದವರು ಹೇಳಿದರು.

ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕೆ ಮಾಡುವ ವಾಹನಗಳು ಓವರ್ ಲೋಡ್‌ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಎಲ್ಲೆಡೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದರ ಜೊತೆಗೆ ಅಪಘಾತಗಳು ಆಗುತ್ತಿವೆ. ಇಂತಹ ವಾಹನಗಳ ವಿರುದ್ಧವೂ ನಿರ್ಧಾಕ್ಷಿಣ್ಯ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.