ಬೆಂಗಳೂರು: ಕಾರ್ಮಿಕ ಕಾಯ್ದೆಗಳ ಅಡಿ ಉದ್ದಿಮೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಸಂಬಂಧ 'ಬೆಂಗಳೂರು ಹೋಟೆಲುಗಳ ಸಂಘ'ದ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅಧಿಸೂಚನೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.
ಅಂತೆಯೇ, ರಾಜ್ಯ ಸರ್ಕಾರದ ಪರ ವಕೀಲರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.
'ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನದ ಮಟ್ಟಿಗೆ ವೇತನ ಸಹಿತ ರಜೆ ಒದಗಿಸಬೇಕು' ಎಂದು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಅಧಿಸೂಚನೆ ಹೊರಡಿಸಿತ್ತು.
'ಇದು ಅಸಾಂವಿಧಾನಿಕ. ಸಂವಿಧಾನದ 14ನೇ ವಿಧಿಗೆ ವಿರುದ್ಧವಾಗಿದೆ. ಆದ್ದರಿಂದ ಇದನ್ನು ರದ್ದುಗೊಳಿಸಬೇಕು' ಎಂದು ಅರ್ಜಿದಾರರು ಕೋರಿದ್ದಾರೆ.
