ಬೈಂದೂರು:ಮನೆಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು: ಅಧಿಕಾರಿಗಳಿಂದ ದಾಳಿ, 7.14 ಕ್ವಿಂಟಾಲ್ ಅಕ್ಕಿ ಜಪ್ತಿ




ಬೈಂದೂರು: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಮನೆಯೊಂದಕ್ಕೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಹರಕೇರಿ ಬಳಿ ಈ ದಾಳಿ ನಡೆದಿದೆ.

ಬೈಂದೂರಿನ ಆಹಾರ ನಿರೀಕ್ಷಕ ವಿನಯ್ ಕುಮಾರ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಬಿಜೂರು ಗ್ರಾಮದ ಹರಕೇರಿ ನಿವಾಸಿ ಅಬ್ದುಲ್ ಬಿನ್ ಅಬ್ಬಾಸ್ ಎಂಬುವವರ ಮನೆಯಲ್ಲಿ ಸರ್ಕಾರದಿಂದ ಉಚಿತವಾಗಿ ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಕುಚ್ಚಲಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಲಾಗಿತ್ತು.

ಅಧಿಕಾರಿಗಳು ದಾಳಿ ನಡೆಸಿದಾಗ, ಒಟ್ಟು 16 ಪಾಲಿಥಿನ್ ಚೀಲಗಳಲ್ಲಿ ತುಂಬಿಸಿಟ್ಟಿದ್ದ 7.14 ಕ್ವಿಂಟಾಲ್ ತೂಕದ ಕುಚ್ಚಲಕ್ಕಿ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ ರೂ. 16,422 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿ ಅಬ್ದುಲ್ ಬಿನ್ ಅಬ್ಬಾಸ್ ಉಚಿತವಾಗಿ ವಿತರಿಸುವ ಅಕ್ಕಿಯನ್ನು ಯಾರಿಂದಲೋ ಕಾನೂನು ಬಾಹಿರವಾಗಿ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ ಎನ್ನಲಾಗಿದೆ. ಈ ಅಕ್ರಮಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 08/2026 ರಂತೆ, ಅತ್ಯಗತ್ಯ ವಸ್ತುಗಳ ಕಾಯ್ದೆ (Essential Commodities Act) ಕಲಂ 3, 6, ಹಾಗೂ 7 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.