ಇಂದು ಕಾರ್ಕಳಕ್ಕೆ ಸಿಎಂ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ



ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 25ರಂದು ಕಾರ್ಕಳ ತಾಲೂಕಿನಲ್ಲಿ ಆಯೋಜಿಸಲಾದ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಸಮಾರಂಭಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟ‌ರ್ ಮೂಲಕ ತೆರಳಿ 11.30ಕ್ಕೆ ಕಾರ್ಕಳದ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದಾರೆ.

ಮುಖ್ಯಮಂತ್ರಿಗಳು ಮೊದಲು ಕಾಬೆಟ್ಟಿನಲ್ಲಿ ಜಿಲ್ಲಾಡಳಿತ, ಜಿ.ಪಂ., ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಡಾ| ಬಿ. ಆರ್. ಅಂಬೇಡ್ಕರ್ ಭವನವನ್ನು ಉದ್ಘಾಟಿಸಲಿದ್ದಾರೆ. ಬಳಿಕ ತಾಲೂಕು ಕಚೇರಿ ರಸ್ತೆಯಲ್ಲಿರುವ ಕುಕ್ಕುಂದೂರು ಕಿಸಾನ್ ಸಭಾ ಟ್ರಸ್ಟ್‌ನ ಮಹಾತ್ಮಾಗಾಂಧಿ ವಸತಿ ಪ್ರೌಢಶಾಲೆಯ 'ಕಿಸಾನ್ ಸಭಾ ಸಭಾಂಗಣ'ವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಮಹಾತ್ಮಾಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮಾಚರಣೆಯನ್ನು ಕುಕ್ಕುಂದೂರಿನ ನಿಟ್ಟೆ ವಿನಯ ಹೆಗ್ಡೆ ಬಯಲು ರಂಗಮಂದಿರದಲ್ಲಿ ಉದ್ಘಾಟಿಸಲಿದ್ದಾರೆ.

ಬಳಿಕ ಮುಖ್ಯಮಂತ್ರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಹಾಗೂ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲು ಸಮಯ ಕಾಯ್ದಿರಿಸಿದ್ದಾರೆ.