![]() |
| ಸಾಂದರ್ಭಿಕ ಚಿತ್ರ |
ಬೆಂಗಳೂರು: ರಾಜ್ಯದಲ್ಲಿ ಕ್ಷೀಣಿಸಿದ್ದ ಪೂರ್ವ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಹವಾಮಾನ ವೈಪರೀತ್ಯದಿಂದಾಗಿ, ಮುಂದಿನ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹವಾಮಾನ ಇಲಾಖೆಯು ರಾಜ್ಯದ 7 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಮತ್ತು 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ರಾಜ್ಯಾದ್ಯಂತ ಗುಡುಗು-ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಏಪ್ರಿಲ್ ಮೊದಲ ವಾರದವರೆಗೆ ಮುಂದುವರಿಯುವ ಲಕ್ಷಣಗಳಿವೆ ಎಂದು ಇಲಾಖೆ ತಿಳಿಸಿದೆ.
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಮಾರ್ಚ್ 26ರಿಂದ ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಾದ ಧಾರವಾಡ, ಬೆಳಗಾವಿ, ಗದಗ, ಹಾವೇರಿ, ವಿಜಯನಗರ, ಗಲಕೋಟೆ, ವಿಜಯಪುರ, ಬಳ್ಳಾರಿ, ಮೈಸೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚುವ ಸಾಧ್ಯತೆ ಇದೆ.ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ಪ್ರತ್ಯಾವರ್ತ ಮಾರುತಗಳು (Anti-cyclone) ದುರ್ಬಲಗೊಂಡಿದ್ದರೂ ಅವುಗಳ ಪ್ರಭಾವ ಮುಂದುವರಿದಿದೆ. ಸಮುದ್ರದ ಕಡೆಯಿಂದ ಬೀಸುತ್ತಿರುವ ತೇವಾಂಶ ಭರಿತ ಗಾಳಿ ಮತ್ತು ಭೂಭಾಗದ ಅಧಿಕ ತಾಪಮಾನದಿಂದಾಗಿ ಸ್ಥಳೀಯವಾಗಿ ಮೋಡಗಳು ಸೃಷ್ಟಿಯಾಗಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆಯ ತಜ್ಞ ಡಾ. ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
