ಕಾರ್ಕಳ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆಯುಂಟು ಮಾಡುತ್ತಿದ್ದ ಆರೋಪಿಯ ವಿರುದ್ಧ ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಕ್ರಮ ಜರುಗಿಸಲಾಗಿದೆ.
ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ಫೈಜಲ್ (22) ಎಂಬಾತನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಈ ಸಂಬಂಧ ಕಾರ್ಕಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರ ವರದಿಯ ಆಧಾರದ ಮೇಲೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಬಂಧನ ಆದೇಶಕ್ಕಾಗಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಆರೋಪಿಯ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಪರಿಶೀಲಿಸಿದ ಬಳಿಕ ಪೊಲೀಸ್ ಮಹಾನಿರೀಕ್ಷಕರು ಬಂಧನ ಆದೇಶ ಹೊರಡಿಸಿದ್ದಾರೆ.
ಅದರಂತೆ, ಕಾರ್ಕಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಆರೋಪಿಗೆ ಬಂಧನ ಆದೇಶ ಜಾರಿಗೊಳಿಸಿದ್ದು, ನಂತರ ಆರೋಪಿಯನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗುತ್ತದೆ.
ಬಂಧಿತನ ವಿರುದ್ಧ ಒಟ್ಟು 5 ಮಾದಕ ದ್ರವ್ಯ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 2 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದ್ದು, 2 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, 1 ಪ್ರಕರಣ ತನಿಖೆಯಲ್ಲಿದೆ.
