ಮಂಗಳೂರು, ಜೂನ್ 16: ಅಡುಗೆ ಅನಿಲ (LPG) ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಮತ್ತು ವಿಳಂಬ ನೀತಿಗಳನ್ನು ಖಂಡಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ (WIM) ವತಿಯಿಂದ ಮಂಗಳೂರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ವಿವಿಧ ಬೇಡಿಕೆಗಳನ್ನೊಳಗೊಂಡ ಫಲಕಗಳನ್ನು ಪ್ರದರ್ಶಿಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಗೃಹಿಣಿಯರು, ಕೂಲಿ ಕಾರ್ಮಿಕರು ಹಾಗೂ ಸಾಮಾನ್ಯ ಜನರ ಮೇಲೆ ಬೆಲೆ ಏರಿಕೆಯು ಉಂಟುಮಾಡುತ್ತಿರುವ ಸಂಕಷ್ಟದ ಬಗ್ಗೆ ಪ್ರತಿಭಟನಾಕಾರರು ಗಮನ ಸೆಳೆದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ WIM ಮಂಗಳೂರು ನಗರ ಜಿಲ್ಲಾಧ್ಯಕ್ಷೆ ಆಯಿಷಾ ಯಾಸ್ಮಿನ್, ನಿರಂತರವಾಗಿ ಏರಿಕೆಯಾಗುತ್ತಿರುವ ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷೆ ಆಯಿಷಾ ಬಜ್ಪೆ, ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳ ಪರಿಣಾಮವಾಗಿ ಮಹಿಳೆಯರು ಮತ್ತು ದುಡಿಯುವ ವರ್ಗದ ಜನರು ಜೀವನ ನಿರ್ವಹಣೆಯಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಜನಪರ ನೀತಿಗಳನ್ನು ಜಾರಿಗೆ ತಂದು ಬೆಲೆ ಏರಿಕೆಯನ್ನು ನಿಯಂತ್ರಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ WIM ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, ಬೆಲೆ ಏರಿಕೆ, ನಿರುದ್ಯೋಗ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು, ಇದರ ಗಂಭೀರ ಪರಿಣಾಮ ಮಹಿಳೆಯರ ಬದುಕಿನ ಮೇಲೆ ಬೀಳುತ್ತಿದೆ ಎಂದು ಆರೋಪಿಸಿದರು. ಜನರ ಸಂಕಷ್ಟಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ WIM ನ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

