ಉಡುಪಿ : ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8 ರಿಂದ 10 ರವರೆಗೂ 4 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ವಿಪರೀತವಾಗಲಿದ್ದು, ಹವಾಮಾನ ಇಲಾಖೆಯು ಈ ಭಾಗಗಳಿಗೆ 'ರೆಡ್ ಅಲರ್ಟ್' ಘೋಷಿಸಿದೆ.ಬೆಂಗಳೂರಿನ ಹವಾಮಾನ ಕೇಂದ್ರ ಭಾನುವಾರ (ಜೂನ್ 7ರಂದು) ಬಿಡುಗಡೆ ಮಾಡಿರುವ ಮುಂದಿನ ನಾಲ್ಕು ದಿನಗಳ ಮುನ್ಸೂಚನೆ ಪ್ರಕಾರ, ದಿನದಿಂದ ದಿನಕ್ಕೆ ಮಳೆಯ ತೀವ್ರತೆ ಹೆಚ್ಚಾಗುವ ಲಕ್ಷಣಗಳಿವೆ. ಕೇವಲ ಮಳೆಯಲ್ಲದೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಎಚ್ಚರಿಕೆಯನ್ನು ಇಲಾಖೆ ನೀಡಿದೆ.
ಜೂನ್ 7 ರಂದು ರಾಜ್ಯದ ಯಾವುದೇ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆಯಾಗಿಲ್ಲ. ಆದರೆ ಇಡೀ ಕರಾವಳಿ, ಮಲೆನಾಡು ಹಾಗೂ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಇರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಯಿದೆ.ಜೂನ್ 8 ಕ್ಕೆ 2 ಜಿಲ್ಲೆಗಳಿಗೆ ರೆಡ್ ಅಲರ್ಟ್
ಜೂನ್ 8 ರಂದು ಮಳೆಯ ಅಬ್ಬರ ಹೆಚ್ಚಾಗಲಿದೆ. ಕರಾವಳಿಯ ಎರಡು ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ. ಈ ಭಾಗಗಳಲ್ಲಿ 204.5 ಮಿ.ಮೀ ಗಿಂತ ಹೆಚ್ಚು ವಿಪರೀತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್ ಮುಂದುವರಿಯಲಿದೆ.
