ಜಂತರ್ ಮಂತರ್ CJP : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮ ಬೇಡ: ಸುಪ್ರೀಂ ಕೋರ್ಟ್


 

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳಕೂಡದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ಜೊತೆಗೆ ವಿವಿಧ ರಾಜ್ಯಗಳಲ್ಲಿ ಪೊಲೀಸರು ವಶಕ್ಕೆ ಪಡೆದಿರುವ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದೂ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ ಹಾಗೂ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಅವರಿದ್ದ ಪೀಠ ಹೇಳಿತು.

ಆದರೆ ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಇದು ಅನ್ವಯಿಸದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಪ್ರತಿಭಟನೆ ವೇಳೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪಗಳು ಮೇಲ್ನೋಟಕ್ಕೆ ಸರಿ ಎಂದು ಕಂಡು ಬಂದಿದ್ದು, ನ್ಯಾಯಸಮ್ಮತ ಮತ್ತು ಸ್ವತಂತ್ರ ತನಿಖೆಗೆ ಅರ್ಹವಾಗಿವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ಘಟನೆಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಪ್ರಸ್ತಾಪವನ್ನು ನ್ಯಾಯಾಲಯ ಮುಂಡಿಟ್ಟಿದೆ.


ಅದಕ್ಕೂ ಮುನ್ನ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ತಮ್ಮ ನಿಲುವು ಸಲ್ಲಿಸಲು ಅವಕಾಶ ನೀಡಿದೆ. ಹಿಂಸಾಚಾರ ನಡೆದಿರುವ ಇತರೆ ರಾಜ್ಯಗಳಿಗೂ ತಮ್ಮ ಅಭಿಪ್ರಾಯ ಸಲ್ಲಿಸಲೂ ಕೋರ್ಟ್ ಸೂಚಿಸಿದೆ. ಹೀಗಾಗಿ ದೆಹಲಿ, ಮಹಾರಾಷ್ಟ್ರ, ಬಿಹಾರ, ಕೇರಳಂ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.


ಇದೇ ವೇಳೆ, ಪ್ರತಿಭಟನೆಗಳಿಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು, ಡ್ರೋನ್ ಚಿತ್ರೀಕರಣ, ವೈರ್‌ಲೆಸ್ ಸಂವಹನ ದಾಖಲೆಗಳು, ಬಾಡಿ ಕ್ಯಾಮೆರಾ ದೃಶ್ಯಗಳು ಹಾಗೂ ಇತರೆ ದಾಖಲೆಗಳನ್ನು ಸಂರಕ್ಷಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.


ಪ್ರತಿಭಟನಾಕಾರರ ಡಿಜಿಟಲ್ ಹಾಗೂ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದೆ.


ಪ್ರತಿಭಟನೆ ವೇಳೆ ಪೆಲೆಟ್ ಗನ್‌ಗಳನ್ನು ಬಳಸಲಾಗಿದ್ದು, ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಒಬ್ಬ ವಿದ್ಯಾರ್ಥಿ ದೃಷ್ಟಿ ಕಳೆದುಕೊಂಡಿದ್ದಾನೆ ಎಂಬ ಆರೋಪವನ್ನೂ ನ್ಯಾಯಾಲಯದ ಗಮನಕ್ಕೆ ತರಲಾಯಿತು. ಇದಲ್ಲದೆ, ರಬ್ಬರ್ ಗುಂಡುಗಳು, ವಿದ್ಯುತ್ ಬ್ಯಾಟನ್‌ಗಳು ಹಾಗೂ ಮೊಳೆಗಳನ್ನು ಅಳವಡಿಸಿದ ಲಾಠಿಗಳನ್ನು ಬಳಸಲಾಗಿದೆ, ನಾಗರಿಕರ ಉಡುಪಿನಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎನ್ನುವುದನ್ನೂ ನ್ಯಾಯಾಲಯದ ಮುಂದೆ ಅರುಹಲಾಯಿತು.


ಪ್ರತಿಭಟನೆಗೆ ಅಪರಾಧ ಹಿನ್ನೆಲೆಯುಳ್ಳವರೂ ನುಸುಳಿ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಇನ್ನೊಂದೆಡೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇದೇ ವೇಳೆ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.