ಕುಂದಾಪುರದಲ್ಲಿ ವ್ಯಕ್ತಿಗೆ ಗುಂಡಿಕ್ಕಿ ಕೊಲೆ; ಆರೋಪಿ ಡೆರಿಕ್ ಕ್ರಾಸ್ತಾ ಪತ್ತೆಗಾಗಿ ಮೂರು ವಿಶೇಷ ತಂಡ

 


ಉಡುಪಿ: ಜಿಲ್ಲೆಯ ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಮನಸ್ತಾಪದ ಹಿನ್ನೆಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಜುಲೈ 30ರಂದು ರಾತ್ರಿ 11:45ಕ್ಕೆ ಡೆರಿಕ್‌ ಎಂಬಾತ ಐವನ್‌ಗೆ ಕರೆ ಮಾಡಿ,ಚಟ್ಲಿ ವಿಚಾರದಲ್ಲಿ ಬಾಕಿ ಹಣ ವಸೂಲಿಗೆ ಮಧ್ಯಸ್ಥಿಕೆ ವಹಿಸುವ ಬಗ್ಗೆ ಮಾತನಾಡಿದ್ದಾನೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿದ್ದು, "ದಮ್ ಇದ್ದರೆ ಒಬ್ಬನೇ ಕುಂದಾಪುರಕ್ಕೆ ಬಾ" ಎಂದು ಡೆರಿಕ್ ಸವಾಲು ಹಾಕಿದ್ದಾನೆ ಎನ್ನಲಾಗಿದೆ.

ಅದರಂತೆ ಜುಲೈ 31ರಂದು ರಾತ್ರಿ 1:30ಕ್ಕೆ ಡೆರಿಕ್ ತನ್ನ ಲೊಕೇಶನ್ ಅನ್ನು ಐವನ್‌ಗೆ ಕಳುಹಿಸಿದ್ದಾನೆ. ಬಳಿಕ ಚರ್ಚ್ ರಸ್ತೆಯ ಹೋಲಿ ರೋಸಾರಿ ಚರ್ಚ್ ಎದುರಿನ ಕಾಂಕ್ರೀಟ್ ರಸ್ತೆಯಲ್ಲಿ ಐವನ್ ಕಾರು ನಿಲ್ಲಿಸಿಕೊಂಡಿದ್ದ ವೇಳೆ, ಬೆಳಗಿನ ಜಾವ ಸುಮಾರು 3:15ಕ್ಕೆ ಕಪ್ಪು-ಕೆಂಪು ಬಣ್ಣದ ಥಾರ್ ಕಾರಿನಲ್ಲಿ ಬಂದ ಡೆರಿಕ್ ಕಾರಿನಿಂದ ಇಳಿದು, ಕೈಯಲ್ಲಿದ್ದ ಗನ್‌ನಿಂದ ಐವನ್‌ನ ಸೊಂಟದ ಕೆಳಭಾಗಕ್ಕೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಐವನ್ ಸ್ಥಳದಲ್ಲೇ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಹಣಕಾಸು ಹಾಗೂ ಇತರ ವ್ಯವಹಾರಗಳಿಗೆ ಸಂಬಂಧಿಸಿದ ಮನಸ್ತಾಪವೇ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 67/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 103 ಹಾಗೂ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ಕಲಂ 3 ಮತ್ತು 25ರಡಿ ಪ್ರಕರಣ ದಾಖಲಾಗಿದೆ.

ಆರೋಪಿ ಡೆರಿಕ್ ಕ್ರಾಸ್ತಾ ಪತ್ತೆಗಾಗಿ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.