ಕಾಕ್ರೋಚ್ ಪಕ್ಷದಿಂದ ಸಂಸತ್ ಚಲೋ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್, ಹಲವರ ಬಂಧನ


 

ನವದೆಹಲಿ: ನೀಟ್ ಹಗರಣ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆ ದೆಹಲಿಯ ಜಂತರ್ ಮಂತರ್​ನಲ್ಲಿ ತೀವ್ರಗೊಂಡಿದ್ದು, ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಸಂಘರ್ಷಣೆ ಉಂಟಾಗಿದೆ. ಸಿಜೆಪಿಯ ಅಭಿಜಿತ್ ದೀಪ್ಕೆ ನೇತೃತ್ವದಲ್ಲಿ 'ಸಂಸತ್ ಚಲೋ' ಮೂಲಕ ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಹಾಗೂ ಆರ್‌ಪಿಎಫ್ ಸಿಬ್ಬಂದಿ ಲಾಠಿ ಚಾರ್ಜ್ ಮಾಡಿದ್ದು, ಹಲವರನ್ನು ಬಂಧಿಸಲಾಗಿದೆ. ಸಿಜೆಪಿ ಉದ್ದೇಶಿತ ಸಂಸತ್ ಚಲೋ ಪ್ರತಿಭಟನೆ ಹಿನ್ನೆಲೆ ಭದ್ರತಾ ಪಡೆಗಳು ಭಾರಿ ಕಟ್ಟೆಚ್ಚರ ವಹಿಸಿವೆ. ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿದ್ದಾರೆ.



ಲಘು ಲಾಠಿ ಪ್ರಯೋಗ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆಗಳು ಮತ್ತು ಬಾಧಿತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಸಿಜೆಪಿ ಜೂನ್ 20 ರಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಸೋಮವಾರ ಆರಂಭಗೊಳ್ಳಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನದಂದು ತಮ್ಮ ಕೆಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ 'ಚಲೋ ಸಂಸತ್' ಮೆರವಣಿಗೆಗೆ ಸಿಜೆಪಿ ಕರೆ ನೀಡಿತ್ತು. ಕರೆ ಬೆನ್ನಲ್ಲೇ ಅಧಿಕ ಸಂಖ್ಯೆಯಲ್ಲಿ ಸಿಜೆಪಿ ಕಾರ್ಯಕರ್ತರು, ಹಲವು ವಿದ್ಯಾರ್ಥಿ ಸಂಘಟನೆಗಳು ಭಾಗಿದ್ದವು. ಪ್ರತಿಭಟನೆಯಲ್ಲಿ ಭಾರಿ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರು ಸೇರಿದ್ದು, ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸುತ್ತಿದ್ದ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರು ಹಾಗೂ ಆರ್‌ಪಿಎಫ್ ಸಿಬ್ಬಂದಿ ಲಘು ಲಾಠಿ ಪ್ರಯೋಗ ಮಾಡಿದ್ದಾರೆ. ಪರಿಣಾಮ ಹಲವು ಪ್ರತಿಭಟನಾಕಾರರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಂದಿನಿಂದ ಸಂಸತ್​ ಮುಂಗಾರು ಅಧಿವೇಶನ ಆರಂಭವಾಗಿದೆ. ಸೋಮವಾರದ ಆಗಸ್ಟ್​ 14ರ ವರೆಗೆ ಅಧಿವೇಶನ ನಡೆಯಲಿದೆ. ಇಂದು ಅಧಿವೇಶನ ಆರಂಭವಾಗುತ್ತಿದ್ದಂತೆ ಲೋಕಸಭೆಯಲ್ಲಿ ಪ್ರತಿಪಕ್ಷದ ಸಂಸದರು ಹಲವಾರು ಪ್ರಮುಖ ವಿಷಯಗಳ ಕುರಿತು ಸರ್ಕಾರದಿಂದ ಉತ್ತರಗಳನ್ನು ಒದಗಿಸುವಂತೆ ಒತ್ತಾಯಿಸಿ ಕೋಲಾಹಲ ಸೃಷ್ಟಿಸಿದರು. ಈ ಹಿನ್ನೆಲೆಯಲ್ಲಿ ಕೆಲಕಾಲ ಅಧಿವೇಶನವನ್ನು ಮುಂದೂಡಲಾಯಿತು. ಈ ಮುಂಗಾರು ಅಧಿವೇಶನದಲ್ಲಿ ಹಲವಾರು ಪ್ರಮುಖ ಮಸೂದೆಗಳನ್ನು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.