2015ರಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಬಳಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‌ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ನ್ಯಾಯಾಲಯವು ಅವರಿಗೆ 6 ತಿಂಗಳ ಸಾದಾ ಕಾರಾಗೃಹ ವಾಸ ಹಾಗೂ 10,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. 23-07-2015ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 315/2015ರಡಿ ಐಪಿಸಿ ಕಲಂ 153(A) ಮತ್ತು 295(A) ಪ್ರಕಾರ ಪ್ರಕರಣ ದಾಖಲಾಗಿತ್ತು. ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ತನಿಖಾಧಿಕಾರಿ ರವಿ ಬಿ.ಎಸ್. ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಪ್ರಿನ್ಸಿಪಲ್ ಸಿ ಜೆ & ಜೆ ಎಮ್ ಎಫ್ ಸಿ ಬೆಳ್ತಂಗಡಿ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ಪ್ರಕಟಿಸಿದೆ.
