ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಪೈಲೆಟ್ ಅಭಿಷೇಕ್ ಪೂಜಾರಿ ಮೃತ್ಯು

 


ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಟ್ರೈನಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಆ.27ರಂದು ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡಿದ್ದು, ಮೃತ ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದವರು ಎಂದು ತಿಳಿದುಬಂದಿದೆ.

ಅಭಿಷೇಕ್ ಪೂಜಾರಿ ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ.

ಅಭಿಷೇಕ್ ಅವರು ಆಗಾಗ್ಗೆ ಕುಟುಂಬದೊಂದಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಆಗಮಿಸುತ್ತಿದ್ದರು ಎಂದು ತಿಳಿದುಬಂದಿದೆ.

ವಿಮಾನ ಪತನದ ಘಟನೆಯ ಬಳಿಕ ಅಭಿಷೇಕ್ ಅವರ ಕುಟುಂಬಸ್ಥರು ಮುಂದಿನ ಕಾನೂನು ಪ್ರಕ್ರಿಯೆಗಳಿಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಹಾಗೂ ಮುಂದಿನ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಮಾಹಿತಿ ಎಸ್ಪಿ ಕಚೇರಿ ಪ್ರಕಟಣೆ ತಿಳಿಸಿದೆ.