ಉಡುಪಿ: ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಇಕ್ಬಾಲ್ ಶೇಖ್ ಬಂಧನ


 

ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ,  ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆಗಸ್ಟ್ 13ರಂದು ಬಂಧನ ಆದೇಶ ಹೊರಡಿಸಿದ್ದರು. ಅದರಂತೆ ಇಕ್ಬಾಲ್‌ನನ್ನು ಬಂಧಿಸಲಾಗಿದೆ.

ಆತನ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎರಡು ಸೇರಿದಂತೆ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಈ ಎಲ್ಲಾ ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿವೆ. ಅಲ್ಲದೆ, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಮತ್ತು ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದ್ದು, ಎರಡೂ ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆಯಾಗಿದೆ.

ಮಾದಕ ದ್ರವ್ಯ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಿರುವ ಇಕ್ಬಾಲ್‌ನನ್ನು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.