ಕಾಪು; ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ: ನಾಲ್ವರು ಆರೋಪಿಗಳ ಬಂಧನ

 


ಕಾಪು: ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.

ಸೆ.19ರಂದು ವಸಂತಿ ಸುನೀತಾ ಕ್ವಾಡ್ರಸ್‌ ಎಂಬುವರು ಮೇಯಲು ಬಿಟ್ಟಿದ್ದ ಐದು ದನಗಳ ಪೈಕಿ ಎರಡು ವರ್ಷದ ಕಪ್ಪು ಬಣ್ಣದ ಒಂದು ದನ ಕಾಣೆಯಾಗಿತ್ತು. ಹುಡುಕಾಟ ನಡೆಸಿದಾಗ ಸಮೀಪದಲ್ಲಿ ನಿಲ್ಲಿಸಿದ್ದ KA19 B 5641 ನೋಂದಣಿ ಸಂಖ್ಯೆಯ ಟೆಂಪೋದಲ್ಲಿ ಕಾಣೆಯಾದ ದನ ಸೇರಿದಂತೆ ಎರಡು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿರುವುದು ಪತ್ತೆಯಾಗಿತ್ತು. ದೂರುದಾರರನ್ನು ಕಂಡ ಆರೋಪಿಗಳು ಟೆಂಪೋ ಸಮೇತ ಪರಾರಿಯಾಗಿದ್ದರು.






ಪ್ರಕರಣ ದಾಖಲಿಸಿಕೊಂಡ ಶಿರ್ವಾ ಪೊಲೀಸರು ಸೆ.19ರಂದು ಕಳತ್ತೂರಿನ ಉಮ್ಮರಬ್ಬ (64) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ತಲೆಮರೆಸಿಕೊಂಡಿದ್ದ ಮೊಹಮ್ಮದ್ ಶರೀಫ್ (31), ಶಂಶುದ್ದೀನ್ (57) ಹಾಗೂ ಮೊಹಮ್ಮದ್ ಆಸೀರ್ (24) ಅವರನ್ನು ಸೆ.20ರಂದು ಕಾಪುವಿನ ಕೊಪ್ಪಲಂಗಡಿಯಲ್ಲಿ ವಾಹನ ಸಮೇತ ಪತ್ತೆಹಚ್ಚಿ ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ ಹಾಗೂ ಕಾಪು ವೃತ್ತ ನಿರೀಕ್ಷಕ ಅಝಮತ್ ಆಲಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಶಿರ್ವಾ, ಪಡುಬಿದ್ರಿ, ಹೆಬ್ರಿ ಠಾಣೆಗಳ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಸಿಡಿಆರ್ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.