ಉಡುಪಿ: ಕುಕ್ಕೆಹಳ್ಳಿ ಗ್ರಾಮದ ಬಡಪಾಲು ಮನೆಯಲ್ಲಿ ವೃದ್ಧೆಯೊಬ್ಬರ ಗಮನ ಬೇರೆಡೆ ಸೆಳೆದು ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹಿರಿಯಡ್ಕ ಪೊಲೀಸರು ಉಮೇಶ್ ಶೆಟ್ಟಿ (45) ಎಂಬಾತನನ್ನು ಬಂಧಿಸಿದ್ದಾರೆ.
ಸೆ. 13ರಂದು ಬಾಬಿ ಹಾಂಡ್ತಿ (75) ಅವರ ಮನೆಗೆ ಬಂದ ಆರೋಪಿ, ವಿಮಾ ಹಣ ಬಿಡುಗಡೆ ಮಾಡಿಸುವುದಾಗಿ ನಂಬಿಸಿ ಬಳಿಕ ಮನೆಯ ಟೇಬಲ್ ಮೇಲಿಟ್ಟಿದ್ದ ಸುಮಾರು ಎರಡು ಪವನ್ ಚಿನ್ನದ ಸರವನ್ನು ಕಳವು ಮಾಡಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು 50ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ತಾಂತ್ರಿಕ ಮಾಹಿತಿಯ ಆಧಾರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ ₹1.85 ಲಕ್ಷ ಮೌಲ್ಯದ 15 ಗ್ರಾಂ ಚಿನ್ನ ಹಾಗೂ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಉಡುಪಿ ಉಪವಿಭಾಗದ ಡಿವೈಎಸ್ಪಿ ಬೆಳ್ಳಿಯಪ್ಪ ಹಾಗೂ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ನೇತೃತ್ವದಲ್ಲಿ ಪಿಎಸ್ಐ ಪುನೀತ್ ಕುಮಾರ್ ಬಿ.ಇ. ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
