ಉಡುಪಿ: ಉಡುಪಿಯ ನೂತನ ಜಿಲ್ಲಾಸ್ಪತ್ರೆಯನ್ನು ಕೂಡಲೇ ಆರಂಭಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಹಾಗೂ ಸದಸ್ಯರು ಶನಿವಾರ ದೇಣಿಗೆ ಸಂಗ್ರಹಿಸಿ, ರಾಜ್ಯ ಸರ್ಕಾರಕ್ಕೆ ಆಸ್ಪತ್ರೆ ಆರಂಭಿಸಲು ಹಣದ ಕೊರತೆಯಿದ್ದರೆ ಸಂಗ್ರಹಿಸಿದ ಹಣವನ್ನು ನೀಡಲು ಸಿದ್ಧ ಎಂದು ಘೋಷಿಸಿದರು.
ಇಲ್ಲಿಯವರೆಗೆ ಘೋಷಣೆಗಳನ್ನು ಕೂಗದೆ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರು ಶನಿವಾರ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು. ಅ. 4ರಂದು ಬೆಳಗ್ಗೆ 10 ಗಂಟೆಯಿಂದ ಸತತ 80 ಗಂಟೆಗಳ ಕಾಲ ಸಂವಿಧಾನವನ್ನು ಮುಂದಿಟ್ಟುಕೊಂಡು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಂಘಟನೆ ತಿಳಿಸಿದೆ.
ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವ ಪದಾಧಿಕಾರಿಗಳು ಹಾಗೂ ಸದಸ್ಯರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಉಂಟಾದರೆ ಜಿಲ್ಲಾಡಳಿತವೇ ನೇರ ಹೊಣೆ ಎಂದು ಎಚ್ಚರಿಸಲಾಯಿತು. ಜಿಲ್ಲಾಡಳಿತ ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ ಸಂಘಟನೆಯ ನಾಯಕರು, ಇದೇ ಧೋರಣೆ ಮುಂದುವರಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ರಾಜ್ಯ ಸಂಚಾಲಕ ಪ್ರಸನ್ನ ಕುಮಾರ್ ಶೆಟ್ಟಿ, ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್, ಜಿಲ್ಲಾಧ್ಯಕ್ಷ ಸುಧೀರ್ ಪೂಜಾರಿ, ಮಹಿಳಾ ಜಿಲ್ಲಾಧ್ಯಕ್ಷೆ ದೇವಕಿ ಬಾರ್ಕೂರು, ಜಿಲ್ಲಾ ಸಂಚಾಲಕ ಎಂ.ಎಸ್. ಸೈಯ್ಯದ್ ನಿಝಾಮುದ್ದೀನ್, ಉಪಾಧ್ಯಕ್ಷ ಅಲ್ಫೋನ್ಸೋ ಮೆನೇಜಸ್ ಸೇರಿದಂತೆ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

